ಅವಸಾನ (ವಿಶ್ವಕಥಾಕೋಶ -೧೬)

ಅವಸಾನ (ವಿಶ್ವಕಥಾಕೋಶ -೧೬)

ಪುಸ್ತಕದ ಲೇಖಕ/ಕವಿಯ ಹೆಸರು
ಪ್ರಧಾನ ಸಂಪಾದಕರು: ನಿರಂಜನ
ಪ್ರಕಾಶಕರು
ನವಕರ್ನಾಟಕ ಪ್ರಕಾಶನ, ಬೆಂಗಳೂರು
ಪುಸ್ತಕದ ಬೆಲೆ
ರೂ. ೬೫.೦೦, ಮುದ್ರಣ: ೨೦೧೧

“೧೯೮೦. ಇದು ನವಕರ್ನಾಟಕ ಪ್ರಕಾಶನ ಸಂಸ್ಥೆಯ ೨೦ನೇ ಹುಟ್ಟು ಹಬ್ಬದ ವರ್ಷ. ಈ ಸಂದರ್ಭದ ನೆನಪಿಗಾಗಿ ಕೆಲವು ಉತ್ಕೃಷ್ಟ ಸಾಹಿತ್ಯ ಕೃತಿಗಳನ್ನು ಪ್ರಕಟಿಸಬೇಕೆಂಬ ಹಂಬಲ ನಮ್ಮನ್ನು ಕಾಡಿತು. ಅದರ ಪರಿಣಾಮವಾಗಿ ವಿಶ್ವಕಥಾಕೋಶ ಯೋಜನೆ ರೂಪುಗೊಂಡಿತು.

ಜಗತ್ತಿನ ಸಾರಸ್ವತ ಭಂಡಾರದ ಒಂದು ಭಾಗವನ್ನು ಕನ್ನಡ ಓದುಗರ ಮುಂದೆ ವಿಶ್ವಕಥಾಕೋಶ ತಂದಿಡುತ್ತದೆ. ನಾನಾ ದೇಶಗಳಿಂದ, ಭಾಷೆಗಳಿಂದ ಆಯ್ದ ಸುಮಾರು ೪೦೦ ಸಣ್ಣ ಕಥೆಗಳ ರಸದೌತಣ ಓದುಗರಿಗಾಗಿ ಇದರಲ್ಲಿ ಕಾದಿದೆ. ಭಾರತೀಯ ಭಾಷೆಗಳಲ್ಲಿ ಇಂತಹ ಒಂದು ಪ್ರಕಟಣೆ ಇದೇ ಮೊತ್ತಮೊದಲನೆಯದು.

ಇದೊಂದು ಬೃಹತ್ ಯೋಜನೆ. ಒಟ್ಟು ೨೫ ಸಂಪುಟಗಳಲ್ಲಿ ಇದರ ಪ್ರಕಟಣೆ. ಜಗತ್ತಿನ ಅತ್ಯುತ್ತಮ ಸಣ್ಣ ಕಥೆಗಳ ಈ ಮಹಾ ಸಂಕಲನವನ್ನು ಸಂಪಾದಿಸುವ ಗುರುತರವಾದ ಹೊಣೆಯನ್ನು ಹೊತ್ತವರು ಖ್ಯಾತ ಸಾಹಿತಿಯೂ, ಸ್ವತಃ ಶ್ರೇಷ್ಟ ಕಥೆಗಾರರೂ ಆದ ನಿರಂಜನರು.”

ಇದು ವಿಶ್ವಕಥಾಕೋಶದ ಮೊದಲ ಮುದ್ರಣದ ಸಮಯದಲ್ಲಿ ಬರೆದ ಪ್ರಕಾಶಕರ ನುಡಿ. ಈ ಕಥಾಕೋಶದ ಎಲ್ಲಾ ಪ್ರತಿಗಳು ಮುಗಿದು ಹೋದ ಕಾರಣ, ಹೊಸ ಓದುಗರಿಗೂ ಪುಸ್ತಕ ದೊರೆಯಬೇಕು ಎಂಬ ಸದಾಶಯದಿಂದ ೨೦೧೧ರಲ್ಲಿ ಎಲ್ಲಾ ಪುಸ್ತಕಗಳ ದ್ವಿತೀಯ ಮುದ್ರಣ ಮಾಡಲಾಯಿತು. ಆ ಸಮಯದಲ್ಲಿ ಪ್ರಕಾಶಕರ ನುಡಿ ಹೀಗಿದೆ. 

“ನವಕರ್ನಾಟಕ ಪ್ರಕಾಶನದ ೫೦ರ ಸಂಭ್ರಮದಲ್ಲಿ ‘ವಿಶ್ವಕಥಾಕೋಶ'ದ ಇಪ್ಪತ್ತೈದು ಸಂಪುಟಗಳನ್ನು ಪುನರ್ಮುದ್ರಿಸಿ ಓದುಗರ ಕೈಗಿಡುತ್ತಿದ್ದೇವೆ. ಮೂವತ್ತು ವರ್ಷಗಳ ಕಾಲ ಅಲಭ್ಯವಾಗಿದ್ದ ಜಗತ್ತಿನ ಸಾಹಿತ್ಯ ಕಥಾ ಕಣಜ ಬೆಳಕು ಕಾಣುವ ಸಮಯದಲ್ಲಿ ಈ ಯೋಜನೆಯ ಹೊಣೆ ಹೊತ್ತ ಶ್ರೇಷ್ಟ ಕಥೆಗಾರ, ಸಾಹಿತಿ ನಿರಂಜನರು ನಮ್ಮೊಂದಿಗೆ ಇದ್ದಿದ್ದರೆ, ನವಕರ್ನಾಟಕದ ಚಿನ್ನದ ಹಬ್ಬ ಹೆಚ್ಚು ಅರ್ಥಪೂರ್ಣವಾಗುತ್ತಿತ್ತು. ಈ ಸಂಪುಟಗಳನ್ನು ಅವರಿಗೆ ಅರ್ಪಿಸಿ, ಅವರನ್ನು ನೆನೆಯುತ್ತೇವೆ.”

ಈ ಸಂಪುಟದ ಬೆಲೆ ಕೈಗೆಟಕುವಂತಿದೆ. ಅದಕ್ಕೆ ಕಾರಣ ಇನ್ಫೋಸಿಸ್ ಫೌಂಡೇಶನ್ ಇದರ ಅಧ್ಯಕ್ಷೆಯಾದ ಶ್ರೀಮತಿ ಸುಧಾ ಮೂರ್ತಿಯವರು. ಈಗ ನಮ್ಮ ಕೈಯಲ್ಲಿರುವುದು ವಿಶ್ವಕಥಾಕೋಶದ ಹದಿನಾರನೆಯ ಸಂಪುಟ ‘ಅವಸಾನ'. ವಿಶ್ವಕಥಾಕೋಶದ ಈ ಸಂಪುಟದಲ್ಲಿ ಗ್ರೀಸ್, ಸೈಪ್ರಸ್ ಹಾಗೂ ತುರ್ಕಿ ದೇಶದ ಕಥೆಗಳಿವೆ. ಸಾಹಿತ್ಯ ಸಂಸ್ಕೃತಿಗಳ ಕ್ಷೇತ್ರದಲ್ಲಿ ಪಶ್ಚಿಮ ಪೂರ್ವಗಳಾದ ಗ್ರೀಸ್, ತುರ್ಕಿ ; ಇವುಗಳ ನಡುವೆ ಸಮನ್ವಯ ಸಾಧಿಸಲಾಗದೆ ಕುದಿಯುತ್ತಿರುವ ಸೈಪ್ರಸ್- ಈ ಮೂರು ಭೂ ಪ್ರದೇಶಗಳು ಈ ಸಂಪುಟದಲ್ಲಿರುವ ಹತ್ತು ಕತೆಗಳಲ್ಲಿ ಮೆರೆದಿವೆ. 

ಈ ಪುಸ್ತಕದಲ್ಲಿ ಇರುವ ೧೦ ಕಥೆಗಳೆಂದರೆ, ಅವಸಾನ (ದೆಮೆತ್ರಿಯೊಸ್ ಬಿಕೆಲಾಸ್), ಮಿಖಾಲಿಯ ರಾತ್ರಿ (ಯೂಲಿಯಾ ಇಯಾತ್ರಿದಿಸ್), ವೆಸ್ಟ್ ಮಿನ್ ಸ್ಟರ್ (ಯೋರ್ಯಿಸ್ ಥೆವೊತೊಕಸ್), ಮಾತೃತ್ವ (ಲಿಲಿಕಾ ನಾಕೊಸ್), ಪ್ರಶಾಂತ ಸಮುದ್ರ (ದೆಸ್ಟಿನಾ ದೆಜೊರ್ಜಿಸ್), ಮನೆಯನ್ನು ಕೊಳ್ಳುವ ಬಗೆ.. (ಲಾರೆನ್ಸ್ ಡರೆಲ್), ಬಂಡಾಯ (ಆಂದ್ರಿ ಆಸ್ ರೊದಿತಿಸ್), ಎಚ್ಚೆತ್ತ ಜನರು (ಅಜಿಜ್ ನೆಸಿನ್), ಸತ್ತವನ ಸಮಾರಾಧನೆ (ಜೆವ್ ದೆತ್ ಕುದ್ರೆತ್), ಬೂದು ಬಣ್ಣದ ಕತ್ತೆ (ರಫೀಕ್ ಹಲೀದ್). 

ಇಲ್ಲಿರುವ ಎಲ್ಲಾ ಕಥೆಗಳ ಲೇಖಕರ ಬಗ್ಗೆ ಪುಟ್ಟದಾದ ಮಾಹಿತಿಯನ್ನು ಕೊನೆಯ ಪುಟಗಳಲ್ಲಿ ನೀಡಲಾಗಿದೆ. ಇದರಿಂದ ಅಪರಿಚಿತರಾಗಿರುವ ಲೇಖಕರನ್ನು ಪರಿಚಯ ಮಾಡಿಕೊಳ್ಳಲು ಸಹಕಾರಿಯಾಗಿದೆ. ಇಲ್ಲಿರುವ ಕಥೆಗಳನ್ನು ಎ. ಈಶ್ವರಯ್ಯ ಇವರು ಕನ್ನಡಕ್ಕೆ ಅನುವಾದ ಮಾಡಿದ್ದಾರೆ. ಈ ದ್ವಿತೀಯ ಮುದ್ರಣವನ್ನು ಪ್ರಕಾಶಕರು ಈ ಸಂಪುಟದ ಮುಖ್ಯ ಸಂಪಾದಕರಾದ ನಿರಂಜನ ಅವರಿಗೇ ಅರ್ಪಿಸಿದ್ದಾರೆ. ಪುಸ್ತಕ ಸುಮಾರು ೧೨೦ ಪುಟಗಳನ್ನು ಹೊಂದಿದೆ. ಗ್ರೀಸ್, ಸೈಪ್ರಸ್ ಹಾಗೂ ತುರ್ಕಿ ದೇಶದ ಕಥೆಗಳನ್ನು ಓದಿ ಆನಂದಿಸಲು ಇದು ಸೂಕ್ತ ಪುಸ್ತಕವಾಗಿದೆ.