ಶೋಕತಪ್ತ ತಾಯಿ ಕುಂತಿ

ಶೋಕತಪ್ತ ತಾಯಿ ಕುಂತಿ

ಪುಸ್ತಕದ ಲೇಖಕ/ಕವಿಯ ಹೆಸರು
ಜಿ.ಎಂ.ಕೆ.
ಪ್ರಕಾಶಕರು
ಸಪ್ನ ಬುಕ್ ಹೌಸ್, ಗಾಂಧಿನಗರ, ಬೆಂಗಳೂರು - ೫೬೦೦೦೯
ಪುಸ್ತಕದ ಬೆಲೆ
ರೂ. ೩೫.೦೦, ಮುದ್ರಣ: ಜೂನ್ ೨೦೨೩

ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಎಂಟನೇ ಪುಸ್ತಕ ‘ಶೋಕತಪ್ತ ತಾಯಿ ಕುಂತಿ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಕುಂತಿಯ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ. 

ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು ಪರಿಗಣಿಸಲ್ಪಟ್ಟಿರುವ ‘ಮಹಾಭಾರತದ ಕಥೆ' ಪ್ರಾಚೀನ ಭಾರತದ ಕಥೆಯೂ ಆಗಿದೆ. ಈ ಕಥೆಯನ್ನು ಯಾರು, ಯಾವ ಕಾಲದಲ್ಲಿ ಓದಿದರೂ ಅದು ತಮ್ಮದೇ ಕಥೆ ಎಂಬ ಭಾವ ಗಾಢವಾಗಿ ಕಾಡುತ್ತದೆ. ಏಕೆಂದರೆ ಈ ಮಹಾಕಾವ್ಯದಲ್ಲಿ ಕಾಣಿಸಿಕೊಳ್ಳುವ ಪಾತ್ರಗಳು ಮಾನವ ಸಹಜ ಗುಣಗಳಿಂದ, ಭಾವಗಳಿಂದ ತೊಳಲಾಡುತ್ತ ನಮ್ಮ ಮಧ್ಯೆ ಈಗ ಕೂಡಾ ನಲಿದಾಡುತ್ತಿರುವಂತೆ ಭಾಸವಾಗುತ್ತದೆ. ಅವರ ಸಂಗದಲ್ಲಿ ನಮ್ಮ ವ್ಯಕ್ತಿತ್ವ ಇನ್ನಷ್ಟು ಹಸನಾಗುತ್ತದೆ, ಹಾಗೆಯೇ ದುಷ್ಟತನ, ಮಾತ್ಸರ್ಯದಂತಹ ದುರ್ಗುಣಗಳನ್ನು ತೊರೆಯಬೇಕೆಂಬ ಪ್ರಜ್ಞೆ ಜಾಗೃತವಾಗುತ್ತದೆ. ಮಹಾಭಾರತವನ್ನು ಕೇವಲ ದಾಯಾದಿ ಕಥೆಯೆಂದು ಭಾವಿಸದೇ ಮಾನವ ಜನಾಂಗಕ್ಕೆ ಸದಾ ಬೆಳಕು ತೋರುವ ಮಹಾಕೃತಿಯೆಂದು ವಿದ್ವಾಂಸರು ಪರಿಗಣಿಸಿದ್ದಾರೆ. ಈ ಮಾಲಿಕೆಯಲ್ಲಿ ಮಹಾಭಾರತದಲ್ಲಿ ಬರುವ ಹತ್ತು ಪ್ರಮುಖ ಪಾತ್ರಗಳ ಪರಿಚಯವನ್ನು ಕೊಡಲಾಗಿದೆ. ಕೃತಿಯ ಮಿತಿಯಲ್ಲಿ ಎಷ್ಟು ಸಾಧ್ಯವೋ ಅಷ್ಟನ್ನು ಹೇಳಲು ಪ್ರಯತ್ನಿಸಲಾಗಿದೆ. ಪ್ರತಿ ಪಾತ್ರದ ಕಥೆಯನ್ನು ಮೊದಲಿನಿಂದ ಕಡೆಯವರೆಗೆ ಸಮಗ್ರವಾಗಿ ಆದರೆ ಸಂಕ್ಷಿಪ್ತವಾಗಿ ನಿರೂಪಿಸಲು ಪ್ರಯತ್ನಿಸಲಾಗಿದೆ. ಓದುಗರು ಈ ಕೃತಿಯನ್ನು ಆದರದಿಂದ ಸ್ವೀಕರಿಸುವರೆಂಬ ನಂಬಿಕೆ ನಮ್ಮದು" ಎಂದಿದ್ದಾರೆ. 

'ಶೋಕತಪ್ತ ತಾಯಿ ಕುಂತಿ’ ಕೃತಿಯಲ್ಲಿ ವಿವಾಹಕ್ಕೆ ಮುನ್ನ ತಾಯಿಯಾದ ಪ್ರಸಂಗ, ವಿವಾಹದ ಬಳಿಕ ಪತಿಯ ವಿಯೋಗ, ಐವರು ಮಕ್ಕಳನ್ನು ಸಾಕಬೇಕಾದ ಕಷ್ಟ, ವಿವಾಹ ಪೂರ್ವದಲ್ಲಿ ಹುಟ್ಟಿದ ಮಗುವನ್ನು ಮತ್ತೆ ಕಂಡ ದಿನ, ಗೊತ್ತಿಲ್ಲದೇ ದ್ರೌಪದಿಯನ್ನು ತನ್ನ ಐವರೂ ಮಕ್ಕಳಿಗೆ ಹಂಚಿದ ಪ್ರಸಂಗ, ದ್ಯೂತದಲ್ಲಿ ಸೋತ ತನ್ನ ಮಕ್ಕಳು ಕಾಡಿಗೆ ಹೋದ ಸಮಯ, ಕುರುಕ್ಷೇತ್ರ ಯುದ್ಧಕ್ಕೆ ಪೂರ್ವದಲ್ಲಿ ತಾನು ತ್ಯಜಿಸಿದ್ದ ಮಗ ಕರ್ಣನ ಬಳಿ ದಾನವನ್ನು ಬೇಡಿದ ಪ್ರಸಂಗ, ಕರ್ಣನ ಮರಣಾನಂತರ ಧರ್ಮರಾಯನ ಬಳಿ ಸತ್ಯ ಸಂಗತಿಯನ್ನು ತಿಳಿಸಿ ಆತನಿಗೆ ತರ್ಪಣ ಬಿಡುವಂತೆ ಮನವಿ ಮಾಡುವ ಪ್ರಸಂಗ ಇವೆಲ್ಲವನ್ನೂ ಕಣ್ಣಿಗೆ ಕಾಣುವಂತೆ ಚಿತ್ರಿಸಲಾಗಿದೆ. ‘ಅಂತೂ ಇಂತು ಕುಂತಿಯ ಮಕ್ಕಳಿಗೆ ರಾಜ್ಯವಿಲ್ಲ' ಎನ್ನುವ ಮಾತು ಬಹಳ ಜನಜನಿತ.

ಕೃತಿಗೆ ಪುಟಗಳ ಮಿತಿ ಇರುವುದರಿಂದ ಸಂಕ್ಷಿಪ್ತವಾಗಿ ಕುಂತಿಯ ಮಾಹಿತಿಯನ್ನು ನೀಡಲಾಗಿದೆ. ಇದು ಮಕ್ಕಳಿಗೆ ಅದರಲ್ಲೂ ವಿದ್ಯಾರ್ಥಿಗಳಿಗೆ ಪೌರಾಣಿಕ ಪ್ರಬಂಧ, ಭಾಷಣ, ನಾಟಕ ರಚನೆಗೆ ಸಹಕಾರಿಯಾಗಬಲ್ಲದು. ಪುಸ್ತಕದ ಒಳಪುಟಗಳಲ್ಲಿ ಅಲ್ಲಲ್ಲಿ ಸೊಗಸಾದ ರೇಖಾಚಿತ್ರಗಳನ್ನು ನೀಡಲಾಗಿದೆ. ೫೦ ಪುಟಗಳ ಈ ಪುಟ್ಟ ಕೃತಿಯು ‘ಶೋಕತಪ್ತ ತಾಯಿ ಕುಂತಿ'ಯ ಬಗ್ಗೆ ಬಹಳಷ್ಟು ವಿಷಯಗಳನ್ನು ಚುಟುಕಾಗಿ ತಿಳಿಸುವಲ್ಲಿ ಸಹಕಾರಿಯಾಗಿದೆ.